ನವದೆಹಲಿ : ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದಲೇ ಆಡಳಿತ ನಡೆಸಲು ಪ್ರಾರಂಭಿಸಿದ್ದಾರೆ.
ಪ್ರಾಯಶಃ ಭಾರತದ ರಾಜಕೀಯ ಇತಿಹಾಸಲ್ಲಿ ಮುಖ್ಯಮಂತ್ರಿಯೊಬ್ಬರು ಜೈಲಿನಿಂದಲೇ ಆಡಳಿತ ನಡೆಸಿದ್ದು ಇದೇ ಮೊದಲು. ರಾಜಧಾನಿ ದೆಹಲಿಯಲ್ಲಿ ತಲೆದೋರಿರುವ ನೀರಿನ ಸಮಸ್ಯೆ ಬಗ್ಗೆ ಜೈಲಿನಿಂದಲೇ ಮೊದಲ ಆದೇಶ ಹೊರಡಿಸಿದ್ದಾರೆ.
ಜಲಸಂಪನ್ಮೂಲ ಖಾತೆ ನಿರ್ವಹಿಸುತ್ತಿರುವ ಅತಿಶಿ ಅವರಿಗೆ ಈ ಸಂಬಂಧ ಆದೇಶ ಕಳುಹಿಸಿದ್ದಾರೆ.
ಕೇಜ್ರಿವಾಲ್ ಅವರು ಜೈಲಿನಿಂದಲೇ ಸಚಿವರಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಅತಿಶಿ, ಕೇಜ್ರಿವಾಲ್ ಅವರು ದೆಹಲಿ ನಿವಾಸಿಗಳು ಎದುರಿಸುತ್ತಿರುವ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಬಗ್ಗೆ ಜೈಲಿನಿಂದಲೇ ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ. ೨ ಕೋಟಿ ದೆಹಲಿ ಜನರನ್ನು ತಮ್ಮ ಕುಟುಂಬವೆಂದು ಭಾವಿಸಿರುವ ಕೇಜ್ರಿವಾಲ್ ಅವರಿಂದ ಮಾತ್ರ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಹೇಳಿದ್ದಾರೆ.
ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು ಕೇಜ್ರಿವಾಲ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿರಬಹುದು, ಅವರಿಗೆ ದೆಹಲಿ ಜನರ ಬಗ್ಗೆ ಇರುವ ಪ್ರೀತಿ ಮತ್ತು ಕಾಳಜಿ ಕಟ್ಟಿಹಾಕಲು ಸಾಧ್ಯವಿಲ್ಲ. ಕೇಜ್ರಿವಾಲ್ ಅವರು ಜೈಲಿನಲ್ಲಿದ್ದರೂ ಯಾವುದೇ ಕೆಲಸಕಾರ್ಯಗಳು ನಿಲ್ಲುವುದಿಲ್ಲ ಎಂದು ಹೇಳಿದರು.
