ಹಾಸನ ; ಹಾಸನ ಲೋಕಸಭಾ ಕ್ಷೇತ್ರದಲ್ಲಿ 2 ದಶಕ ಜೆಡಿಎಸ್ ತೆಕ್ಕೆಯಲ್ಲಿರುವ ಕ್ಷೇತ್ರವನ್ನು ವಶಕ್ಕೆ ಪಡೆಯಲು ಆಡಳಿತಾರೂಢ ಕಾಂಗ್ರೆಸ್ ಶ್ರಮಿಸುತ್ತಿದೆ. ದೊಡ್ಡ ಗೌಡ್ರ ಕುಟುಂಬದ ಭದ್ರಕೋಟೆಯಾಗಿರುವ ಹಾಸನದಲ್ಲಿ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮತ್ತೆ ಕಣಕ್ಕಿಳಿದಿದ್ದಾರೆ. ಈಗಾಗಲೇ ಟಿಕೆಟ್ ಘೋಷಣೆಯಾಗಿದ್ದು, ಕಾಂಗ್ರೆಸ್ ನಿಂದ ಶ್ರೇಯಸ್ ಪಟೇಲ್ ಅವರನ್ನು ಕಣಕ್ಕಿಳಿಸಲಾಗಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲನುಭವಿಸಿತ್ತು. ಪಕ್ಷ ಸ್ಪರ್ಧಿಸಿದ್ದ ಕ್ಷೇತ್ರಗಳೆಲ್ಲ ಕೈಕೊಟ್ಟರೂ, ದೊಡ್ಡ ಗೌಡ್ರ ಕುಟುಂಬದ ಕೈಹಿಡಿದ ಏಕೈಕ ಕ್ಷೇತ್ರ ಹಾಸನ. ಕಳೆದ ಬಾರಿ ಲೋಕಸಭಾ ಚುನಾವಣೆ ನಡೆಯುವ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಿತ್ತು. ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದರು.
ಹಾಸನ ಲೋಕಸಭೆ ಕ್ಷೇತ್ರದಿಂದ ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿದ್ದರು. ಸ್ವಾತಂತ್ರ‍್ಯ ನಂತರ ಚಿಕ್ಕಮಗಳೂರು ಜಿಲ್ಲೆಯನ್ನೂ ಒಳಗೊಂಡು 1951 ರಲ್ಲಿ ರೂಪಗೊಂಡ ಹಾಸನ ಲೋಕಸಭಾ ಕ್ಷೇತ್ರ ಕಳೆದ ಹದಿನೇಳು ಚುನಾವಣೆಯಲ್ಲೂ ರಾಜ್ಯದ ಗಮನವನ್ನು ಸೆಳೆದಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 60 ವರ್ಷ ರಾಜಕೀಯವಾಗಿ ಬೆಂಬಲ ನೀಡಿರುವ ಹಾಸನ ಜಿಲ್ಲೆಯಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕಳೆದ ಸಲ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಹಾಗೂ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಕ್ಷೇತ್ರ ತ್ಯಾಗ ಮಾಡಿದರು. 2019ರಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಮೊದಲ ಗೆಲುವು ಸಾಧಿಸಿದ್ದರು






