ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು.

ಇಂದು ಹುಬ್ಬಳ್ಳಿ, ಹಾಸನ ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು ಮತ್ತು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ 33 ವರ್ಷದ ಮೊಮ್ಮಗನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿ ಎದುರು ಜೆಡಿಎಸ್ ಸಂಸದನ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ನೂರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವೂ ಅತ್ಯಂತ ಭಯಾನಕವಾಗಿದ್ದು, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ ಎಂದು ಅಲ್ಕಾ ಲಂಬಾ ಹೇಳಿದ್ದಾರೆ.

“ಕಳೆದ ಕೆಲವು ವರ್ಷಗಳಿಂದ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ, ದೌರ್ಜನ್ಯ ಎಸಗಿದ 3,000 ಕ್ಕೂ ಹೆಚ್ಚು ವಿಡಿಯೋಗಳು ಕನ್ನಡಿಗರು ಮತ್ತು ಭಾರತೀಯರ ಆತ್ಮಸಾಕ್ಷಿಯನ್ನು ಅಲ್ಲಾಡಿಸಿವೆ” ಎಂದು ಅವರು ಹೇಳಿದರು.

Author

Leave a Reply

Your email address will not be published. Required fields are marked *