ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾವು ಯಾವತ್ತಿಗೂ ಈ ದೇಶದ ಮಹಿಳಾ ಶಕ್ತಿಯ ಜೊತೆ ನಿಲ್ಲಲಿದ್ದೇವೆ. ಮಹಿಳೆಯರಿಗೆ ಆಗುವ ಅವಮಾನವನ್ನು ಸಹಿಸಲ್ಲ
ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನೀಡಿದ ಪ್ರತಿಕ್ರಿಯೆ.
ಅದಲ್ಲದೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಅದು ಕ್ರಮವನ್ನು ತೆಗೆದುಕೊಳ್ಳಬೇಕು, ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯಕ್ಕೆ ಸಂಬಂಧಿಸಿದ್ದು ಎಂದು ಹೇಳಿದರು.
ಅಸ್ಸಾಂನ ಗುವಾಹಟಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಲು ಇಷ್ಟಪಡುತ್ತೇನೆ. ಕರ್ನಾಟಕದಲ್ಲಿ ಯಾವ ಸರ್ಕಾರ ಇರೋದು, ಅಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವಿದೆ. ಇದುವರೆಗೂ ಅವರು ಯಾಕೆ ಕ್ರಮವನ್ನು ತೆಗೆದುಕೊಂಡಿಲ್ಲ, ಅದು ರಾಜ್ಯ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಾಗಿರುವುದರಿಂದ ನಾವು ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ನಾವು ರಾಜ್ಯ ಸರ್ಕಾರದ ತನಿಖೆಯ ಪರ ಇದ್ದೇವೆ. ನಮ್ಮ ಮಿತ್ರ ಪಕ್ಷ ಜೆಡಿಎಸ್ ಕೂಡ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಈಗಾಗಲೇ ಹೇಳಿದೆ. ಇವತ್ತು ಜೆಡಿಎಸ್ ಕೋರ್ ಕಮಿಟಿ ಸಭೆ ಇದ್ದು, ಅದರಲ್ಲಿ ಅವರು ಕ್ರಮವನ್ನು ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
