ಹುಬ್ಬಳ್ಳಿ: ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರು ಈ ಬಾರಿಯೂ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ನೋಡಲು ಸಂಕಲ್ಪ ಮಾಡಿ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರು ಮತ್ತು ಪದಾಧಿಕಾರಿಗಳು ಬಿಜೆಪಿ ಎಸ್ಸಿ ಮೋರ್ಚಾ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಿದರು.

ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಇಂದು ಎಸ್ಸಿ ಮೋರ್ಚಾ ಮುಖಂಡರು ಮತ್ತು ಎಲ್ಲಾ ಪದಾಧಿಕಾರಿಗಳ ಪೂರ್ವಭಾವಿ ಸಭೆ ಕರೆದು ಚರ್ಚಿಸಲಾಯಿತು.

ಸಭೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ಪ್ರಮುಖರಾದ ಬಸವರಾಜ ಅಮ್ಮಿನಬಾವಿ, ಮಹೇಂದ್ರ ಕೌತಾಳ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ