ಬೆಂಗಳೂರು : ಮಿಸ್ಟರ್ ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು, ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ.
ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿಯವರಿಗೆ ಈ ಪ್ರಶ್ನೆ ಕೇಳಿದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ?.
ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ನಿಮ್ಮ ಕಾಲದಲ್ಲಿ ಆದ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ಕೊಂಚ ನೆಮ್ಮದಿ ನೀಡಬೇಕು ಎನ್ನುವ ಕಾರಣದಿಂದ ಐದು ಗ್ಯಾರಂಟಿ ಜಾರಿ ಮಾಡಿದೆವು. ಪ್ರತೀ ಕುಟುಂಬಕ್ಕೆ 4 ರಿಂದ 6 ಸಾವಿರ ರೂಪಾಯಿ ಉಳಿತಾಯವಾಗಿ ನನ್ನ ಜನರ ಕೊಳ್ಳುವ ಶಕ್ತಿ ಹೆಚ್ಚಾಯಿತು ಎಂದರು.
ಈ ದೇಶದ ಶೇ 95 ರಷ್ಟು ಬಹುಸಂಖ್ಯಾತ ಜನ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಒದಗಿಸುತ್ತಿರುವುದು ನಮ್ಮ ಸಂವಿಧಾನ. ಈ ಸಂವಿಧಾನವನ್ನು ಬದಲಾಯಿಸುತ್ತೀವಿ ಎನ್ನುವುದು ಬಿಜೆಪಿಯ ಅಜೆಂಡಾ. ಇದನ್ನು ಬಿಜೆಪಿ ಕೇಂದ್ರ ಸಚಿವರಾಗಿದ್ದವರೇ ಬಹಿರಂಗವಾಗಿ ಹೇಳಿದ್ದಾರೆ. ಆದ್ದರಿಂದ ದೇಶದ ಸಂವಿಧಾನವನ್ನು ಬದಲಾಯಿಸಿ ಮನುಸ್ಮೃತಿ ಜಾರಿಗೆ ತರಲು ಅವಕಾಶ ಕೊಡಬೇಡಿ ಎಂದು ಅವರು ಮನವಿ ಮಾಡಿದರು.







