ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದಾರೆ.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆ ಕುರಿತು ಕೆಲವೊಂದು ವಿವರಗಳನ್ನು ರಾಜ್ಯ ಪಾಲರು ಕೇಳಿದ್ದಾರೆ ಎಂದು ತಿಳಿದು ಬಂದಿದೆ.
‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ –1997 ಮತ್ತು ಅದಕ್ಕೆ ತಂದಿರುವ ತಿದ್ದುಪಡಿಗಳನ್ನು ಹೈಕೋರ್ಟನ ಧಾರವಾಡ ಪೀಠ ಈಗಾಗಲೇ ವಜಾ ಮಾಡಿದೆ. ಹೈಕೋರ್ಟ್ ನೀಡಿದ್ದ ಈ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಅಂತಿಮ ವಿಚಾರಣೆ ಬಾಕಿ ಇದೆ. ಈ ಹಂತದಲ್ಲಿ ತಿದ್ದುಪಡಿ ಮಾಡಬಹುದೇ ಎಂಬ ಬಗ್ಗೆ ಹೆಚ್ಚಿನ ಸ್ಪಷ್ಟೀಕರಣದ ಅಗತ್ಯವಿದೆ’ ಎಂದು ಉಲ್ಲೇಖಿಸಿರುವ ರಾಜ್ಯಪಾಲರು ಕಡತವನ್ನು ವಾಪಸ್ ಕಳುಹಿಸಿದ್ದಾರೆ.







