ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(MUDA) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಮೇಲಿನ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ, ಮಂಗಳವಾರ(ಸೆ.24) ತನ್ನ ತೀರ್ಪು ಪ್ರಕಟಿಸಿದ್ದು, ರಾಜಭವನದ ವಿರುದ್ಧದ ಕಾನೂನು ಸಮರದಲ್ಲಿ ಸಿದ್ದರಾಮಯ್ಯ ಅವರಿಗೆ ಕಾನೂನು ಹೋರಾಟದಲ್ಲಿ ಭಾರೀ ಹಿನ್ನಡೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಅವರ ಮುಂದಿನ ನಡೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ವಾದ ಮಂಡಿಸಿದ್ದರು. ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ವಾದ ಮಂಡಿಸಿದ್ದರು. ಅಲ್ಲದೇ ದೂರುದಾರರಾದ ಟಿಜೆ ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು. ಈ ಎಲ್ಲಾ ವಾದ- ಪ್ರತಿವಾದ ಆಲಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದರು.
