ಬೆಂಗಳೂರು ; “ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲಾ ವರ್ಗದ ಜನ ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಅವರು ವಿಧಾನಸಭೆ ಚುನಾವಣೆ ವೇಳೆ ಶೇ.5ರಷ್ಟು ಒಕ್ಕಲಿಗ ಮತಗಳು ಕಾಂಗ್ರೆಸ್ ಕಡೆ ವಾಲಿದ್ದವು. ಈ ಬಾರಿ ಒಕ್ಕಲಿಗರು ಯಾರನ್ನು ಬೆಂಬಲಿಸಲಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ ಅವರು, “ಒಕ್ಕಲಿಗರಾಗಲಿ, ಬೇರೆ ಸಮುದಾಯದವರಾಗಲಿ ಯಾರೂ ದಡ್ಡರಲ್ಲ. ತಮಗೆ ಯಾರು ಅನುಕೂಲ ಮಾಡಿಕೊಡಲಿದ್ದಾರೆ ಹಾಗೂ ದೇಶಕ್ಕೆ ಯಾರು ಸೂಕ್ತ ಎಂದು ನೋಡುತ್ತಾರೆ. ತಮಗೆ, ರಾಜ್ಯಕ್ಕೆ, ದೇಶಕ್ಕೆ ಯಾರು ಉತ್ತಮರು ಎಂದು ಜನ ಆಲೋಚನೆ ಮಾಡುತ್ತಾರೆ. ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ” ಎಂದರು.

ಸರ್ಕಾರ ಬೀಳಿಸಿದವರನ್ನೇ ಸ್ವಾಮೀಜಿಗಳ ಬಳಿ ಕರೆದುಕೊಂಡು ಹೋದರೆ ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ? ಒಕ್ಕಲಿಗ ಸರ್ಕಾರ ಬೀಳಿಸಿದ ವಿಚಾರವಾಗಿ ಸ್ವಾಮೀಜಿ ಉತ್ತರ ಕೊಡಬೇಕು ಎಂಬ ಹೇಳಿಕೆ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ,

“ಈ ವಿಚಾರವಾಗಿ ಸ್ವಾಮೀಜಿಗಳು ಉತ್ತರ ನೀಡಬೇಕು ಎಂದು ನಾನು ಕೇಳಿಲ್ಲ. ಕುಮಾರಸ್ವಾಮಿ ಹಾಗೂ ಕೆಲವು ಮಂತ್ರಿಗಳು ಸ್ವಾಮೀಜಿಗಳ ಕಾರ್ಯಕ್ರಮಕ್ಕೆ ಹೋಗಿದ್ದರು. ಅವರು ವಾಪಸ್ ಬರುವ ವೇಳೆಗೆ ಆಪರೇಷನ್ ಕಮಲ ನಡೆದಿತ್ತು. ಸ್ವಾಮೀಜಿಗಳಿಗೂ ಒಕ್ಕಲಿಗ ವ್ಯಕ್ತಿ ಸಿಎಂ ಆಗಿರುವ ಬಗ್ಗೆ ಅಭಿಮಾನ ಇರುತ್ತದೆ. ಆದರೆ ಈಗ ಒಕ್ಕಲಿಗ ಸಿಎಂಅನ್ನು ತೆಗೆದವರನ್ನೇ ಜತೆಗೆ ಕರೆದುಕೊಂಡು ಹೋದರೆ ಹೇಗೆ? ಸ್ವಾಮೀಜಿಗಳ ಆಶೀರ್ವಾದ ಎಲ್ಲರಿಗೂ ಬೇಕು. ಹೀಗಾಗಿ ಚೆಲುವರಾಯಸ್ವಾಮಿ ಅವರು ನಮ್ಮ ಅಭ್ಯರ್ಥಿಗಳನ್ನು ಕರೆದುಕೊಂಡು ಹೋಗಿದ್ದರು. ಅದೇ ರೀತಿ ಇವರು ಕೂಡ ಆಶೀರ್ವಾದ ಪಡೆಯಲು ಹೋಗಿದ್ದಾರೆ. ಕುಮಾರಸ್ವಾಮಿ, ಮಂಜುನಾಥ್ ಅವರು ಸ್ವಾಮೀಜಿಗಳ ಆಶೀರ್ವಾದ ಕೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ ಸರ್ಕಾರ ತೆಗೆದವರನ್ನೇ ಜತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಅವರು ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ ಎಂದಷ್ಟೇ ನಾನು ಕೇಳಿದೆ” ಎಂದು ತಿಳಿಸಿದರು.

ಅವರೇ ಜೆಡಿಎಸ್ ಗೆ ಮುಕ್ತಿ ಕೊಟ್ಟಿದ್ದಾರೆ:

ಸ್ವಾಮೀಜಿಗಳು ಕೃಷ್ಣನಂತೆ ಅವರು ಪಾಂಡವರಂತೆ ಇರುವ ಜೆಡಿಎಸ್ ಪರವಾಗಿ ನಿಲ್ಲಲಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ ಎಂದರು.

Author

Leave a Reply

Your email address will not be published. Required fields are marked *