ನಾವು ರೇವಣ್ಣನವರನ್ನು ಬಂಧಿಸಿದ್ದೇವೆ, ನೀವು ಅತ್ಯಾಚಾರಿಗಳನ್ನು ಬಂಧಿಸುತ್ತೀರಾ ಮೋದಿಯವರೆ ?

CM Siddaramaiah : ಈಗಲಾದರೂ ನೊಂದ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ನಿಮ್ಮ ಆತ್ಮಸಾಕ್ಷಿಯೂ ನಿಮ್ಮನ್ನು ಕ್ಷಮಿಸಲಾರದು

ಬೆಂಗಳೂರು : ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಆರೋಪಯಾಗಿದ್ದ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ? ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿರುವ ಪ್ರಶ್ನೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವೀಟರ್​​) ನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯೆ ಅಪಹರಣದ ಆರೋಪ ಪ್ರಕರಣವನ್ನು ವಿಶೇಷ ತನಿಖಾ ದಳದ ಮೂಲಕ ನಿಷ್ಪಕ್ಷಪಾತ, ಪಾರದರ್ಶಕ ತನಿಖೆಗೆ ಒಳಪಡಿಸಿ ನೊಂದವರ ಕಣ್ಣೀರು ಒರೆಸುವ ಪ್ರಯತ್ನವನ್ನು ಒಂದು ಸರ್ಕಾರವಾಗಿ ನಾವು ಮಾಡಿದ್ದೇವೆ. ಮಹಿಳೆಯರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಪ್ರಧಾನಿ ಮೋದಿ ಅವರೇ ಈಗ ನಿಮ್ಮ ಸರದಿ

ಮಹಿಳಾ ಕಾಳಜಿ ಬರೀ ನಿಮ್ಮ ಭಾಷಣಕ್ಕೆ ಸೀಮಿತವಲ್ಲ, ಕೃತಿಯಲ್ಲಿಯೂ ಇದೆ ಎನ್ನುವುದಾದರೆ ಬ್ರಿಜ್‌ಭೂಷಣ್ ಸಿಂಗ್, ಕುಲ್‌ದೀಪ್ ಸೆಂಗರ್‌ ರಂಥ ಮಹಿಳಾ ಪೀಡಕರು ಮಾಡಿರುವ ಪಾಪಕ್ಕೆ ತಕ್ಕ ಶಿಕ್ಷೆಯಾಗುವಂತೆ ಮಾಡಿ.ಈಗಲಾದರೂ ನೊಂದ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ನಿಮ್ಮ ಆತ್ಮಸಾಕ್ಷಿಯೂ ನಿಮ್ಮನ್ನು ಕ್ಷಮಿಸಲಾರದು ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದೆ, ಇವರಿಂದ ಸಂವಿಧಾನ ಉಳಿಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಹಾಗಾಗಿ ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಬೆಳಗಾವಿ ಪತ್ರಿಕಾಗೋಷ್ಟಿಯಲ್ಲಿ ಸಿದ್ದರಾಮಯ್ಯ ಹೇಳಿದರು.

ಅಂಬೇಡ್ಕರ್ ಅವರು ನೀಡಿರುವ ಭಾರತೀಯ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶ, ಸಮ ಸಮಾಜದ ಗ್ಯಾರಂಟಿ ನೀಡುತ್ತದೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ, ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ.

ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು ಕೋರಿದಾಗ, ಅಕ್ಕಿ ದಾಸ್ತಾನಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ನೀಡಲು ಒಪ್ಪಲಿಲ್ಲ. ಆದ್ದರಿಂದ ನಮ್ಮ ಸರ್ಕಾರ ಅಕ್ಕಿ ಬದಲು ಕೆಜಿಗೆ 34 ರೂ. ನಂತೆ 5 ಕೆ.ಜಿ ಗೆ 170 ರೂ. ಹಾಗೆ ಜುಲೈ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ.

ಗೃಹಜ್ಯೋತಿಯನ್ನು ಜುಲೈ ತಿಂಗಳಲ್ಲಿ ಜಾರಿ ಮಾಡಲಾಯಿತು. 1.60 ಕೋಟಿ ಫಲಾನುಭವಿಗಳಿಗೆ ಅಂದರೆ ರಾಜ್ಯದ ಸುಮಾರು 92% ಜನರಿಗೆ ಇದರಿಂದ ಲಾಭವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಮನೆ ಯಜಮಾನಿಯರಿಗೆ ತಲಾ 2,000 ರೂ.ನಂತೆ ಆಗಸ್ಟ್ ತಿಂಗಳಿನಿಂದ ಜಾರಿ ಮಾಡಲಾಯಿತು ಎಂದು ಅವರು ವಿವರಿಸಿದರು.

Author