ತೀವ್ರ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಕೊನೆಗೂ ಸಡಿಲಗೊಂಡಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಅಳೆದು ತೂಗಿ ಹುರಿಯಾಳುಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. 224 ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳಲ್ಲಷ್ಟೆ ಗೊಂದಲವಿದೆ. ಈ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಮತ್ತೊಂದು ಸುತ್ತಿನ ಸಭೆ ಬಳಿಕ ಎಲ್ಲಾ 224 ಕ್ಷೇತ್ರಗಳ ಪಟ್ಟಿ ಅನೌನ್ಸ್ ಆಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ದೆಹಲಿಯ ಎಐಸಿಸಿ ಕಚೇರಿಯಿಂದಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಈ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸ್ಕೀನಿಂಗ್ ಕಮಿಟಿಯ ಮುಖ್ಯಸ್ಥರಾದ ಮಧುಸೂಧನ್ ಮಿಸ್ತ್ರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಹಿರಿಯನಾಯಕರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿರಲಿದ್ದಾರೆ.