ಶಿವರಾಜ್ ಸಿಂಗ್ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್

ಮಂದ್ಸೋರ್: ಮಧ್ಯಪ್ರದೇಶದ ಮಂದ್ಸೋರ್ ಗೋಲಿಬಾರ್ ಪ್ರಕರಣದ ನೈತಿಕ ಹೊಣೆ ಹೊತ್ತು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕಳೆದ ಜೂನ್ ಒಂದರಿಂದ ಸಾಲ ಮನ್ನಾ ಮತ್ತು ಬೆಂಬಲ ಬೆಲೆ ನೀಡುವಂತೆ ಆಗ್ರಹಿಸುತ್ತಿದ್ದ ರೈತರ ಮೇಲೆ ನಿನ್ನೆ ಮಧ್ಯಾಹ್ನ 2 ಗಂಟೆಯ ಸುಮಾರಿನಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ವೇಳೆ ಇಬ್ಬರು ರೈತರು ಸೇರಿದಂತೆ ಒಟ್ಟು ಆರು ನಾಗರಿಕರು ಬಲಿಯಾಗಿದ್ದರು.

ಗೋಲಿಬಾರ್ ವಿರೋಧಿಸಿ, ಇಂದು ರೈತ ಸಂಘಟನೆಗಳು ಮತ್ತು ಕಾಂಗ್ರೆಸ್ ಮಧ್ಯಪ್ರದೇಶ ಬಂದ್​ಗೆ ಕರೆನೀಡಿತ್ತು. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮಧ್ಯಪ್ರದೇಶದ ಬೆಳವಣಿಗೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಕೂಡ ಖಂಡಿಸಿದೆ.

ರೈತರ ಆತ್ಮಹತ್ಯೆಗೆ ರಾಜ್ಯ ಸರ್ಕಾರ ಬಿಡ್ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಕಮಲ್ ನಾಥ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂದ್ಸೋರ್ ಘಟನೆ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು. ರೈತರ ಹತ್ಯೆ ನಡೆಸಿರುವುದು ನಾಚಿಕೆಗೇಡಿನ ಸಂಗತಿ. ಈ ಘಟನೆಯ ಹೊಣೆ ಹೊತ್ತು ಶಿವರಾಜ್ ಸಿಂಗ್ ರಾಜಿನಾಮೆ ಕೊಡಬೇಕು ಎಂದು ಕೂಡ ಅವರು ಆಗ್ರಹಿಸಿದ್ದಾರೆ. ಅಲ್ಲದೇ, ಈ ಹೊಣೆಯನ್ನು ಪೊಲೀಸ್ ಅಧಿಕಾರಿಗಳ ಮೇಲೆ ವರ್ಗಾಯಿಸಿದರೆ ಅನ್ಯಾಯ ಎಸಗಿದಂತೆ ಎಂದು ಕೂಡ ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಪ್ರಚೋದನೆ ನೀಡಿದೆ ಎಂದು ಆರೋಪಿಸಿದ್ದಾರೆ. ದೇಶದಲ್ಲಿ ಶಾಂತಿಯುತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಇಂಥ ಘಟನೆ ನಡೆದಿರುವುದು ದುಃಖಕರ ಸಂಗತಿ. ಸಿಎಂ ಶಿವರಾಜ್ ಸಿಂಗ್ ಅವರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್ ಪಕ್ಷ ರೈತರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರದೀಪ್ ಮಾಲ್ಗುಡಿ ನ್ಯಾಷನಲ್ ಡೆಸ್ಕ್ ಸುದ್ದಿ ಟಿವಿ

0

Leave a Reply

Your email address will not be published. Required fields are marked *