ಬೆಂಗಳೂರು : “ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಮಾತಿಗೆ ಬದ್ಧರಾಗಿರುವುದಿಲ್ಲ. ಹೀಗಾಗಿ ಅವರ ಮಾತಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಬುಧವಾರ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರು ಯಾರನ್ನ ಟೀಕೆ ಮಾಡಿಲ್ಲ ಹೇಳಿ. ಪ್ರಣಾಳಿಕೆ ಬಿಡಿ, ಕುಮಾರಸ್ವಾಮಿ ಅವರು ನಮ್ಮ ಪ್ರತಿ ವಿಚಾರವನ್ನು ಟೀಕೆ ಮಾಡುತ್ತಾರೆ. ಮೇಕೆದಾಟು ಪಾದಯಾತ್ರೆ ಟೀಕೆ ಮಾಡಿದ್ದವರು ಈಗ ಮೇಕೆದಾಟು ಯೋಜನೆ ಜಾರಿಗೆ ಶಪಥ ಮಾಡುವುದಾಗಿ ಹೇಳಿದ್ದಾರೆ. ಮಠದ ಸ್ವಾಮೀಗಳನ್ನು ಬಿಟ್ಟಿಲ್ಲ. ಎರಡು ಮಠ ಮಾಡಿದ್ದಾರೆ. ಈಗ ದಿನಬೆಳಗಾದರೆ ಮಠಕ್ಕೆ ಹೋಗಿ ಭೇಟಿ ಮಾಡುತ್ತಾರೆ. ಅವರು ತಮ್ಮ ಮಾತಿಗೆ ಎಂದಿಗೂ ಬದ್ಧರಾಗಿರುವುದಿಲ್ಲ. ಹೀಗಾಗಿ ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಯಡಿಯೂರಪ್ಪನವರ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಕುಮಾರಸ್ವಾಮಿ ಬಗ್ಗೆ ಯಡಿಯೂರಪ್ಪ ಮತ್ತು ಯಡಿಯೂರಪ್ಪ ಅವರ ಬಗ್ಗೆ ದೇವೇಗೌಡ ಅವರು ಮಾತನಾಡಿದ್ದನ್ನು ನಾವು ನೋಡಿದ್ದೇವೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದಾಗ ಇದೇ ಯೋಗೇಶ್ವರ್, ಅಶ್ವತ್ಥ್ ನಾರಾಯಣ, ಅಶೋಕ್ ಅವರೇ ಸರ್ಕಾರ ಕೆಡವಿದರು. ಕುಮಾರಸ್ವಾಮಿಯವರು ಈಗ ಅವರ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಸರ್ಕಾರ ಕೆಡವಿದವರು ಅವರು. ಆದರೆ ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಒಕ್ಕಲಿಗರು ಮತ್ತು ಸ್ವಾಮೀಜಿಗಳು ದಡ್ಡರಲ್ಲ:

ಒಕ್ಕಲಿಗರ ಸ್ವಾಮೀಜಿಗಳನ್ನು ಭೇಟಿ ಮಾಡಿದರೆ ಸಮುದಾಯದ ಮತಗಳು ವಿಭಜನೆ ಆಗುತ್ತವೆಯೇ ಎಂದು ಕೇಳಿದಾಗ, “ಒಕ್ಕಲಿಗರು ಮತ್ತು ಸ್ವಾಮೀಜಿಗಳು ದಡ್ಡರಲ್ಲ. ಸ್ವಾಮೀಜಿಗಳ ಬಳಿ ಬರುವವರಿಗೆ ವಿಭೂತಿ, ಹೂವಿನ ಹಾರ ಹಾಕಿ ಕಳಿಸುತ್ತಾರೆ. ಅವರು ನಮ್ಮ ಪರ, ಅವರ ಪರ ಇಬ್ಬರ ಪರವೂ ಮಾಡುವುದಿಲ್ಲ. ಸ್ವಾಮೀಜಿಗಳು ಬುದ್ಧಿವಂತರು ರಾಜಕೀಯದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ. ಜನತಾದಳದವರು ಮಠವನ್ನು ಇಬ್ಭಾಗ ಮಾಡಿರುವ ಬಗ್ಗೆ ಸ್ವಾಮೀಜಿಗಳಿಗೆ ಅರಿವಿದೆ. ನಮ್ಮ ಜನ ಕೂಡ ಇದನ್ನು ಗಮನಿಸುತ್ತಾರೆ. ಮೈತ್ರಿ ಸರ್ಕಾರ ಪತನವಾದ ಬಳಿಕ ನಮ್ಮ ಸಮಾಜದ ಸಿಎಂ ಅವರನ್ನು ಇಳಿಸಿ ಬಿಟ್ಟಿರಲ್ಲ ಎಂದು ಸ್ವಾಮೀಜಿಗಳು ಬಿಜೆಪಿಯರನ್ನು ಪ್ರಶ್ನಿಸಬಹುದಿತ್ತಲ್ಲವೇ? ಇದನ್ನು ಕೇಳುವ ಶಕ್ತಿ ಸ್ವಾಮೀಜಿಗಳಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಒಕ್ಕಲಿಗ ಮುಖ್ಯಮಂತ್ರಿಯನ್ನು ಕೆಳಗಿಳಿಸಿದವರನ್ನೇ ಇಂದು ಸ್ವಾಮೀಜಿಯವರ ಬಳಿ ಕರೆದುಕೊಂಡು ಹೋಗಿ ಆಶೀರ್ವಾದ ಪಡೆಯುತ್ತಿದ್ದಾರಲ್ಲವೇ? ಎಂದರು.

Author

Leave a Reply

Your email address will not be published. Required fields are marked *