ಧಾರವಾಡ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಲಿಂಗಾಯತರ ವಿರೋಧ ನುಂಗಲಾರದ ಬಿಸಿ ತುಪ್ಪವಾಗಿದೆ. ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ ಜೋಶಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ತೀರ್ಮಾನ ಕೈಗೊಂಡಿದ್ದಾರೆ.
ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಅವರು ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದರು. ಇದರಿಂದಾಗಿ ಧಾರವಾಡ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿದೆ. ಹಾಗೆ ಪ್ರಲ್ಹಾದ್ ಜೋಶಿ ಅವರಿಗೆ ಜಯದ ದಾರಿ ಕಠಿಣವಾಗಲಿದೆ.
ಕಳೆದ ಒಂದೆರಡು ತಿಂಗಳಿನಿಂದ ಮುಂಬೈ ಕರ್ನಾಟಕದ ಹಲವಾರು ಮಠಾಧೀಶರು ಜೋಶಿ ಅವರ ವಿರುದ್ಧ ಧ್ವನಿ ಎತ್ತಿದ್ದರು. ಇದರ ನೇತೃತ್ವ ದಿಂಗಾಲೇಶ್ವರ ಸ್ವಾಮೀಜಿ ಅವರದಾಗಿತ್ತು. ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡ ಜೋಷಿ ಅವರು ತಮ್ಮನ್ನು ವಿರೋಧಿಸುತ್ತಿದ್ದ ಕೆಲವು ಲಿಂಗಾಯತ ಸ್ವಾಮೀಜಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ದಿಂಗಾಲೇಶ್ವರ ಸ್ವಾಮೀಜಿ ಮಾತ್ರ ತಮ್ಮ ನಿಲುವನ್ನು ಬದಲಿಸಲಿಲ್ಲ.
ಜೋಶಿ ಅವರು ಹಲವಾರು ಲಿಂಗಾಯತ ನಾಯಕರನ್ನು ಮೆಟ್ಟಿದ್ದಾರೆ. ತುಳಿದುಹಾಕಿದ್ದಾರೆ ಎಂಬ ಆರೋಪವನ್ನು ಅವರು ಮಾಡಿದ್ದರು.
ಈ ಎಲ್ಲ ಬೆಳವಣಿಗೆಗಳ ನಡುವೆ ಬೆಂಗಳೂರಿಗೆ ಆಗಮಿಸಿದ್ದ ಅವರು ತಮ್ಮ ಬೆಂಬಲಿಗರು ಮತ್ತು ಅಭಿಮಾನಿಗಳ ಜೊತೆ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಂಡರು.







