ಬೆಂಗಳೂರು : ಕರ್ನಾಟಕ ಬಿಸಿಲಿನ ಬೇಗೆ ಹೊತ್ತಿ ಉರಿಯುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ. ಮುಂದಿನ ಮೂರು ನಾಲ್ಕು ದಿನ ತಾಪಮಾನ ಇನ್ನಷ್ಟು ಹೆಚ್ಚಾಗಬುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನ ಉಷ್ಣ ಅಲೆ ಬೀಸಬಹುದು ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ-ಮಧ್ಯ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ 4 ರಿಂದ 5 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗಬಹುದು.
ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದೆ. ಜನರು ಹಗಲು ಹೊತ್ತಿನಲ್ಲಿ ಸಾಧ್ಯವಾದಷ್ಟು ಮನೆಯೊಳಗೆ ಇರಬೇಕು. . ಜನರು ಮನೆಯಿಂದ ಹೊರಗೆ ಕಾಲಿಟ್ಟಾಗಲೆಲ್ಲಾ ನೀರು ಅಥವಾ ದ್ರವ ಪದಾರ್ಥಗಳನ್ನು ಒಯ್ಯುವಂತೆ ಸಲಹೆ ನೀಡಲಾಗಿದೆ. .
ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ತುಮಕೂರು, ಬಾಗಲಕೋಟೆ ಮತ್ತು ಚಿತ್ರದುರ್ಗದ ಕೆಲವು ಭಾಗಗಳಲ್ಲಿ ತಾಪಮಾನವು 3.1- 5 ಡಿಗ್ರಿ ಸೆಲ್ಸಿಯಸ್ ಮತ್ತು ಮಂಡ್ಯ, ದಾವಣಗೆರೆ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ 1.6- 6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.
ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು 1.2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಸಿಯಸ್ ಆಗಿತ್ತು.
