ಬೆಂಗಳೂರು : ಕರ್ನಾಟಕದಲ್ಲಿ ‘ಮೋದಿ ಅಲೆ’ ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಇದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸ ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದೂ ಅವರು ದೂರಿದರು.
“ಕರ್ನಾಟಕದ ಮಟ್ಟಿಗೆ ಕಾಂಗ್ರೆಸ್ ಅತ್ಯಂತ ಉತ್ತಮ ಸ್ಥಿತಿಯಲ್ಲಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಕಾಗಿಲ್ಲ. ಈ ಚುನಾವಣೆಯಲ್ಲಿ ಗೆಲ್ಲುವವರು ನಾವೇ ಎಂದರು.
ರಾಜ್ಯದಲ್ಲಿ ಮೋದಿ ಅಲೆ ಇಲ್ಲ. ಏಕೆಂದರೆ ಕಳೆದ 10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರ ಕರ್ನಾಟಕದಿಂದ ಕೋಟ್ಯಂತರ ರೂಪಾಯಿ ತೆರಿಗೆ ಸಂಗ್ರಹಿಸಿದ್ದರೂ, 236 ತಾಲ್ಲೂಕುಗಳ ಪೈಕಿ 230 ತಾಲ್ಲೂಕುಗಳು ಭೀಕರ ಬರಗಾಲ ಎದುರಿಸುತ್ತಿದ್ದರೂ ರಾಜ್ಯಕ್ಕೆ ಯಾವುದೇ ಬರ ಪರಿಹಾರ ನೀಡಿಲ್ಲ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಖ್ಯಾತ ಹೃದ್ರೋಗ ತಜ್ಞ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ವಿರುದ್ಧ ತಮ್ಮ ಸಹೋದರ ಹಾಗೂ ಮೂರು ಬಾರಿ ಸಂಸದ ಡಿ.ಕೆ.ಸುರೇಶ್ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ-ಜೆಡಿ(ಎಸ್) ಚುನಾವಣಾ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಇದು ವಿಫಲ ಮೈತ್ರಿಯಾಗಿದ್ದು, ಜನರು ಅವರನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.







