ಶಿವಮೊಗ್ಗ : ಜನವರಿ 12 ರಂದು ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಯುವನಿಧಿ ಸರ್ಕಾರದ 5ನೇ ಮಹತ್ವಾಕಾಂಕ್ಷಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮ್ಯ ಅವರು ಸೇರಿದಂತೆ ಸಚಿವ ಸಂಪುಟದ ಸದಸ್ಯರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಈಗಾಗಲೇ ಅನುಷ್ಠಾನಗೊಳಿಸಲಾಗಿದ್ದು, 5ನೇ ಗ್ಯಾರಂಟಿ ಯೋಜನೆಯನ್ನು ಜನವರಿ 12ರಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದವರು ನುಡಿದರು.
ಪ್ರಗತಿ ಎಂಬುದು ಒಂದು ನಿರಂತರ ಪ್ರಕ್ರಿಯೆ. ಈ ಹಾದಿಯಲ್ಲಿ ಯಾರೂ ಅವಕಾಶ ವಂಚಿತರಾಗಬಾರದು. ಸಮಾಜದ ಪ್ರತಿಯೊಬ್ಬರಿಗೂ ಪ್ರಗತಿಯ ಫಲಗಳು ದೊರೆಯಬೇಕು ಹಾಗೂ ಅಭಿವೃದ್ಧಿಯ ಪಾಲುದಾರರಾಗಬೇಕೆಂಬ ಆಶಯ ನಮ್ಮದಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಗಳು ಸಫಲವಾಗಿವೆ ಎಂದರು.
ಯುವನಿಧಿ ಯೋಜನೆಯ ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಇದರ ವ್ಯವಸ್ಥಿತ ಅನುಷ್ಟಾನ, ವೇದಿಕೆ ನಿರ್ಮಾಣ ಮತ್ತು ವಾಹನ ಸಂಚಾರ ದಟ್ಟಣ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.