ನವದೆಹಲಿ : ದೆಹಲಿ ಮದ್ಯ ನೀತಿ ಹಗರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅರ್ಜಿಯ ತುರ್ತು ವಿಚಾರಣೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅರವಿಂದ್ ಕೇಜ್ರಿವಾಲ್ ಅರ್ಜಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ, ಏಪ್ರಿಲ್ 24ರೊಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಮದ್ಯದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಆರಂಭಿಸಿದೆ.
ತಮ್ಮ ಬಂಧನವನ್ನು ಎತ್ತಿ ಹಿಡಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಡಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 24ರೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಕೇಳಿದೆ.
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರಕರಣದ ಶೀಘ್ರ ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು.
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಸಿಂಘ್ವಿ ಹೇಳಿದ್ದಾರೆ. ನೋಟಿಸ್ ಜಾರಿ ಮಾಡಿದ ನ್ಯಾಯಮೂರ್ತಿ ಖನ್ನಾ ಅವರು ಏಪ್ರಿಲ್ 29ಕ್ಕೆ ಪಟ್ಟಿ ಮಾಡುವಂತೆ ಸೂಚಿಸಿದರು.
ಈ ವೇಳೆ ಸಿಂಘ್ವಿ ಅವರು ಶೀಘ್ರ ವಿಚಾರಣೆಗೆ ಒತ್ತಾಯಿಸಿದಾಗ, ನ್ಯಾಯಾಧೀಶರು ನಿರಾಕರಿಸಿದರು. ಇದು ಸಾಧ್ಯವಾದಷ್ಟು ಬೇಗ ದಿನಾಂಕ ಎಂದು ಹೇಳಿದರು.
ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಏಪ್ರಿಲ್ 1ರಂದು ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಲಾಯಿತು
